ಅನ್ನಭಾಗ್ಯ ಯೋಜನೆ: 3.92 ಕೋಟಿ ಫಲಾನುಭವಿಗಳ ಖಾತೆಗೆ ರೂ. 2,444 ಕೋಟಿ ಹಣ ಜಮೆ.
ಬೆಂಗಳೂರು,ನವೆಂಬರ್,20,2023(www.justkannada.in): ಅನ್ನಭಾಗ್ಯ ಯೋಜನೆಯಡಿ 3.92 ಕೋಟಿ ಫಲಾನುಭವಿಗಳ ಖಾತೆಗೆ ರೂ. 2,444 ಕೋಟಿ ಹಣ ಜಮೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಬಡತನ ಮತ್ತು ಹಸಿವು ಇಂದಿನ ಸಮಾಜವನ್ನು ಬಾಧಿಸುತ್ತಿರುವ ಮಾರಕ ರೋಗಗಳು. ನಾಡಿನ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಉದ್ದೇಶದಿಂದ ಅನ್ನಭಾಗ್ಯ ಯೋಜನೆಯಡಿ ಬಡಕುಟುಂಬಗಳ ಪ್ರತಿ ಸದಸ್ಯನಿಗೆ ತಲಾ 10 ಕೆ.ಜಿ ಅಕ್ಕಿ ನೀಡುವ ಘೋಷಣೆ ಮಾಡಲಾಗಿತ್ತು. 5 ಕೆ.ಜಿ ಹೆಚ್ಚುವರಿ ಅಕ್ಕಿ ಲಭ್ಯವಿಲ್ಲದೇ ಇರುವುದರಿಂದ ರೂ. 170 ಅನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಉದ್ದೇಶಕ್ಕಾಗಿ ಒಟ್ಟು ರೂ. 2,444 ಕೋಟಿ ಹಣವನ್ನು ವಿನಿಯೋಗಿಸಲಾಗಿದೆ. ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದರು.
ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ. ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ. ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ, ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Key words: Annabhagya Yojana- Rs. 3.92 crore –beneficiaries-2,444 crore- money- deposited