HomeBreaking NewsLatest NewsPoliticsSportsCrimeCinema

ಅರವಿಂದ ಬೆಲ್ಲದ್‌ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತ- ಸಿಎಂ ಸಿದ್ದರಾಮಯ್ಯ

05:46 PM Sep 03, 2024 IST | prashanth

ಬೆಂಗಳೂರು,ಸೆಪ್ಟಂಬರ್,3,2024 (www.justkannada.in):  ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ಪತ್ರ ಬರೆದು ತಮ್ಮ ಬಳಿ ಕ್ಷಮೆ ಕೋರಿದ ವಿಧಾನಸಭೆ ವಿಪಕ್ಷ ಉಪನಾಯಕ ಹಾಗೂ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ನಡೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಅರವಿಂದ ಬೆಲ್ಲದ್‌ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತ ಎಂದಿದ್ದಾರೆ.

ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ.

ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ.  ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ.

ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Key words: Arvind Bellad, Letter, valuable, politics, CM Siddaramaiah

Tags :
Arvind BelladCM Siddaramaiahletterpoliticsvaluable
Next Article