ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡದಿದ್ದರೆ ಕಠಿಣ ಕ್ರಮ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚನೆ
ಬೆಂಗಳೂರು,ಜುಲೈ,1,2024 (www.justkannada.in): ನ್ಯಾಯಾಲಯದ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಹಕಾರ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಪ್ರಗತಿ ಪರಿಶೀಲಿಸುವಂತೆ ನಿರ್ದೇಶನ ನೀಡಿದರು.
ಸಂವಿಧಾನಾತ್ಮಕ ಹುದ್ದೆಗಳನ್ನು ಭರ್ತಿ ಮಾಡಬೇಕಾದ್ದು ಸರ್ಕಾರದ ಜವಾಬ್ದಾರಿಯಾಗಿದೆ. ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಹಾಗೂ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಇಲಾಖೆಗಳ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎಲ್ಲಾ ಇಲಾಖೆಗಳಿಗೆ ಪ್ರಥಮ ಆದ್ಯತೆಯ ಮೇರೆಗೆ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಇಲಾಖೆಯ ಮೂಲಕ ಪತ್ರ ಬರೆಯಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರದ ಸೂಚನೆ ಮತ್ತು ನ್ಯಾಯಾಲಯದ ಆದೇಶದ ಹೊರತಾಗಿ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಾಕಿ ಇರುವ 76 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಚರ್ಚಿಸಿದ ಅವರು, 2015 ರಿಂದ ಬ್ಯಾಕ್ ಲಾಗ್ ನೇಮಕಾತಿಗೆ ವಿನಾಯಿತಿ ನೀಡಲು ಸರ್ಕಾರದ ಹಲವು ನಿಗಮ ಮಂಡಳಿಗಳು ವಿನಂತಿಸಿದ್ದು, ಈ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಮಂಡಿಸಿ ಚರ್ಚಿಸಿ ಎಲ್ಲರೂ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಪೂರಕವಾಗಿ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು
ಇದೇ ವೇಳೆ ಬ್ಯಾಕ್ ಲಾಗ್ ಹುದ್ದೆಗಳ ವಯೋಮಿತಿಯನ್ನು ಹೆಚ್ಚಳ ಮಾಡುವ ಕುರಿತು ಅಧಿಕಾರಿಗಳಿಂದ ಸಲಹೆಯನ್ನು ಸ್ವೀಕರಿಸಿದರು. ಈ ಸಭೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
Key words: backlog, posts, filled, Minister, HC Mahadevappa