HomeBreaking NewsLatest NewsPoliticsSportsCrimeCinema

ಪಾದಯಾತ್ರೆಗೆ ಸಿಕ್ಕ ಯಶಸ್ಸು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ನಾಯಕರಿಂದ ಆಗ್ರಹ

01:22 PM Aug 17, 2024 IST | prashanth

ಬೆಂಗಳೂರು, ಆಗಸ್ಟ್‌ 17,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ.

ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಸಿಎಂ ರಾಜೀನಾಮೆ ನೀಡಬೇಕು- ಪ್ರತಿಪಕ್ಷ ನಾಯಕ ಆರ್.ಅಶೋಕ್

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು  ಹೇಳಿದರು.

ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು. ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್‌, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಇಷ್ಟೆಲ್ಲ ಆಗಿರುವಾಗ ಇದು ದೊಡ್ಡ ಹಗರಣ ಎಂಬುದು ಸಾಬೀತಾಗಿದೆ ಎಂದರು.

ಕಾಂಗ್ರೆಸ್‌ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್‌ ಪಡೆಯಬೇಕೆಂಬುದು ನಮ್ಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕೆಂದು ನಮ್ಮ ಆಗ್ರಹ ಎಂದು ತಿಳಿಸಿದರು.

ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್‌ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ. ರಾಜ್ಯಪಾಲರು ಸರ್ಕಾರದ ಭಾಗ. ಅವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿದರೆ ಅವರು ಸಂವಿಧಾನಕ್ಕೆ ತೋರುವ ಅಗೌರವ ಎಂದರು.

ಕಾಂಗ್ರೆಸ್‌ ಅಭಿವೃದ್ಧಿ ಮಾಡದೆ ಹೈಕಮಾಂಡ್‌ಗೆ ಎಟಿಎಂ ಆಗಿ ಕೆಲಸ ಮಾಡುತ್ತಿದೆ. ತುಂಗಭದ್ರಾ ಜಲಾಶಯದ ಗೇಟ್‌ ದುರಸ್ತಿ ಮಾಡಲು ಕೂಡ ಸರ್ಕಾರದ ಬಳಿ ಹಣವಿಲ್ಲ ಎಂದು ದೂರಿದರು.

ಸರ್ಕಾರ ಅಸ್ಥಿರಗೊಳಿಸುತ್ತಿಲ್ಲ

ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಶಾಸಕರೇ ತಿರುಗಿಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹ.

ಸಿಎಂ ವಿರುದ್ಧ ಪ್ರಾಷಿಕ್ಯೂಷನ್ ಗೆ ರಾಜ್ಯಪಾಲರಿಂದ ಅನುಮತಿ ಕುರಿತು  ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯಪಾಲರು ಸಿಎಂ ವಿರುದ್ಧದ ಮುಡಾ ಹಗರಣ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಸಾಕಷ್ಟು ದಾಖಲೆ ಪುರಾವೆ ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣ ವಿರುದ್ಧ ಹಾಗೂ ಸಿಎಂ ಸ್ವಜನ ಪಕ್ಷಪಾತದ ವಿರುದ್ಧ ಹೋರಾಟ ನಡೆಸಲಾಗಿತ್ತು.   ಸಿಎಂ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ. ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಒತ್ತಾಯಿಸಿದ್ದಾರೆ.

ಪ್ರಾಸಿಕ್ಯೂಷನ್ ಗೆ ಅನುಮತಿ ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ- ನಿಖಿಲ್ ಕುಮಾರಸ್ವಾಮಿ

ಈ ಕುರಿತು ಟ್ವೀಟ್ ಮಾಡಿರುವ  ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ,  ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಗೌರವಾನ್ವಿತ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ. ಈ ಬಗ್ಗೆ ವಿಸ್ತೃತ ತನಿಖೆ ನಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್, ಬಿಜೆಪಿ ಪಕ್ಷಗಳು ಬೆಂಗಳೂರಿನಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದ್ದನ್ನು ಸ್ಮರಿಸಬಹುದು.

ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಕ್ರಮ ಸಾಬೀತುಪಡಿಸಿದೆ. ಸೂರ್ಯಚಂದ್ರರು ಇರುವುದು ಎಷ್ಟು ಸತ್ಯವೋ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ.

ಮಾನ್ಯ ಮುಖ್ಯಮಂತ್ರಿಗಳಿಗೆ ಅನ್ಯ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲವಾದರೆ, ನಮ್ಮ ಹೋರಾಟ ನಿರಂತರ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

Key words: BJP, JDS leaders, demand, CM Siddaramaiah, resignation

Tags :
BJPCM SiddaramaiahDemandJDS leadersresignation
Next Article