ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಸಂಸದರು ಕೇಂದ್ರದೊಂದಿಗೆ ಮಾತನಾಡಿ ರಾಜ್ಯಕ್ಕೆ ಪರಿಹಾರ ಕೊಡಿಸಲಿ- ಸಿಎಂ ಸಿದ್ಧರಾಮಯ್ಯ
ಕೊಪ್ಪಳ,ನವೆಂಬರ್,2,2023(www.justkannada.in): ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸಿದರೆ ಉತ್ತಮ ಎಂದು ಸಿಎಂ ಸಿದ್ದರಾಮಯ್ಯ ಚಾಟಿ ಬೀಸಿದರು.
ಕೊಪ್ಪಳದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ಮನವಿ ಸಲ್ಲಿಸಲಾಗಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ , ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರಸರ್ಕಾರ ನರೇಗಾ ಯೋಜನೆಯಡಿ ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಶಾಸಕರನ್ನು ಕೆಲವು ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕ ಮಾಡುವ ಪ್ರಕ್ರಿಯೆಯೂ ಇದ್ದು.ಈ ಬಗ್ಗೆಯೂ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.
ಬರನಿರ್ವಹಣೆಗೆ ಸಂಬಂಧಿಸಿದಂತೆ ಯಾವ ಸಚಿವರೂ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಎಲ್ಲಾ ಜಿಲ್ಲಾ ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಭೇಟಿ ನೀಡಿ, ಜನರ ಅಹವಾಲುಗಳನ್ನು ಕೇಳಿ, ಅವರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ರಾಜ್ಯಸರ್ಕಾರ ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲೆಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಅನುದಾನ ನೀಡಿದ್ದು. ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಸಲ್ಲಿಸಿದ್ದಲ್ಲಿ, ಸರ್ಕಾರ ತಕ್ಷಣ ಅನುದಾನ ಒದಗಿಸಲಿದೆ. ಈ ವಿಚಾರ ಕೃಷಿ ಇಲಾಖೆಗೆ ಸಂಬಂಧಪಟ್ಟಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಈ ಮುಂಚೆ ನೀಡುತ್ತಿದ್ದಂತೆ ಕೃಷಿ ಪಂಪ್ ಸೆಟ್ ಗಳಿಗೆ ಪೂರಕ ಸೌಲಭ್ಯಗಳನ್ನು ರೈತರಿಗೆ ಮುಂದುವರೆಸಲಾಗುವುದು ಎಂದರು.
ತನಿಖಾ ಸಂಸ್ಥೆಗಳಿಂದ ಕಾಂಗ್ರೆಸ್ ನವರ ಭ್ರಷ್ಟಾಚಾರ ಬೆಳಕಿಗೆ ಬರುತ್ತಿರುವುದಾಗಿ ಬಿಎಸ್ ವೈ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಇವೆಲ್ಲ ಸುಳ್ಳು ಆರೋಪಗಳು ಎಂದು ಹೇಳಿದರು.
ಸಿದ್ದರಾಮಯ್ಯರವರು ಮುಂಚಿನ ಆಡಳಿತದ ವೈಖರಿ ತೋರುತ್ತಿಲ್ಲ ಎಂಬ ಯಡಿಯೂರಪ್ಪನವರ ಹೇಳಿಕೆ ವಿಚಾರ, ಯಡಿಯೂರಪ್ಪನವರು ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಬಿಜೆಪಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತು. ವಿಧಾನಸಭೆಯಲ್ಲಿ ಅವರು ಕಣ್ಣೀರಿಟ್ಟಿದ್ದರು. ಅವರ ಪಕ್ಷದವರೇ ಅವರನ್ನು ಮನೆಗೆ ಕಳುಹಿಸಿದ್ದಾರೆ. ಅವರ ಹೇಳಿಕೆಗಳಿಗೆ ಏನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿದ್ಧರಾಮಯ್ಯ ಟಾಂಗ್ ನೀಡಿದರು.
ಕಾಂಗ್ರೆಸ್ ಶಾಸಕರು ದುಬೈಗೆ ಪ್ರವಾಸ ಹೋಗುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಅವರ ಹಣದಲ್ಲಿ ಅವರು ಹೋಗುತ್ತಿದ್ದಾರೆ. ಸರ್ಕಾರದಿಂದ ನಾವು ಯಾರನ್ನೂ ಕಳಿಸೋಲ್ಲ. ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಯುತ್ತದೆ. ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ಮಾಡುತ್ತೇವೆ. ಮತ್ತೆ ಚುನಾವಣೆಗೆ ಹೋಗುತ್ತೇವೆ. ಮತ್ತೆ ಜನ ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Key words: BJP -MPs - farmers, - talk - Center - CM Siddaramaiah