ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಹೈಕೋರ್ಟ್ ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್' ಸೂಚನೆ.
ನವದೆಹಲಿ,ನವೆಂಬರ್, 10,2023(www.justkannada.in): ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ನಲ್ಲಿ ಇತ್ಯರ್ಥಪಡಿಸಿಕೊಳ್ಳುವಂತೆ ಸಿಬಿಐಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್ ಸಿಬಿಐ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಬೇಲಾ ತ್ರಿವೇದಿ ನೇತೃತ್ವದ ದ್ವಿಸದಸ್ಯ ನ್ಯಾಯಪೀಠದಲ್ಲಿ ಅರ್ಜಿಯ ವಿಚಾರಣೆಯನ್ನು ನಡೆಸಿತು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚನೆ ನೀಡಿದೆ.
2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಸಿಬಿಐ ತನಿಖೆಗೆ ವಹಿಸಲು ಅಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಅವರು ಅನುಮತಿ ನೀಡಿದ್ದರು. ಬಳಿಕ ಡಿಕೆ ಶಿವಕುಮಾರ್, ಸಿಬಿಐ ತನಿಖೆಗೆ ಸರಕಾರ ವಹಿಸಿದ್ದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಹೈಕೋರ್ಟ್ ವಿಭಾಗೀಯ ಪೀಠ, ಸಿಬಿಐ ತನಿಖೆಗೆ ತಡೆ ನೀಡಿತ್ತು. ಇದರೊಂದಿಗೆ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿತ್ತು.
ನಂತರ ಹೈಕೋರ್ಟ್ ವಿಭಾಗೀಯ ಪೀಠದ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರದ ತನಿಖೆ ಮಾಡಲು ಹೈಕೋರ್ಟ್ ವಿಧಿಸಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐ ಮೇಲ್ಮನವಿ ಅರ್ಜಿಯಲ್ಲಿ ಸುಪ್ರೀಂಕೋರ್ಟ್ಗೆ ಮನವಿ ಮಾಡಿತ್ತು.
Key words: DK Shivakumar- Illegal- property –gain- case - Supreme Court