ಈಜಿಪುರ ಫ್ಲೈ ಓವರ್ ಕಾಮಗಾರಿ ವಿಳಂಬ: ನಿನ್ನ ಕೈಲಿ ಆಗದಿದ್ರೆ ಜಾಗ ಖಾಲಿ ಮಾಡಿ-ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್.
ಬೆಂಗಳೂರು,ಮೇ,22,2024 (www.justkannada.in): ಶಾಂತಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಈಜಿಪುರ ಫ್ಲೈ ಓವರ್ ಕಾಮಗಾರಿ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಗುತ್ತಿಗೆದಾರರಿಗೆ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ, ನಿನ್ನ ಕೈಲಿ ಆಗದಿದ್ರೆ ಜಾಗ ಖಾಲಿ ಮಾಡಿ ಎಂದು ಖಡಕ್ ವಾರ್ನಿಂಗ್ ಕೊಟ್ಟರು.
ಕಳೆದ ಆರು ವರ್ಷಗಳಿಂದ ಈಜಿಪುರ ಫ್ಲೈ ಓವರ್ ಕಾಮಗಾರಿ ನೆನೆಗುದಿಗೆ ಬಿದ್ದು ಸಾರ್ವಜನಿಕರಿಗೆ ವಿಪರೀತ ಕಿರಿಕಿರಿ ಆಗುತ್ತಿದೆ. 2.95 ಕಿ.ಮೀ. ಉದ್ದದ ಈಜಿಪುರ ಫ್ಲೈ ಓವರ್ ಕಾಮಗಾರಿ ಇದಾಗಿದೆ. ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರಸಕ್ತ ಸರ್ಕಾರ ಅಧಿಕಾರಕ್ಕೆ ಬಂದನಂತರ ದಿನಾಂಕ 20-11-2023 ರಂದು BSCPL ಎಂಬ ಕಂಪೆನಿಗೆ ಕಾರ್ಯಾದೇಶ ನೀಡಲಾಗಿತ್ತು. ಟೆಂಡರ್ ಷರತ್ತಿನ ಪ್ರಕಾರ 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು. ಆದರೆ ಕಳೆದ ಆರು ತಿಂಗಳಲ್ಲಿ ಕೇವಲ ಶೇ 4 ರಿಂದ 6 ರಷ್ಟು ಪ್ರಗತಿಯಾಗಿದೆ.
ಇಂದು ಬೆಂಗಳೂರು ಸಿಟಿ ರೌಂಡ್ಸ್ ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯಗೆ ಈ ಮಾಹಿತಿ ತಿಳಿದಿದ್ದು, ಈ ವೇಳೆ ಸ್ಥಳದಲ್ಲಿದ್ದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಗುತ್ತಿಗೆದಾರರಿಗೆ ನಿಯಮಾನುಸಾರ ನೋಟಿಸ್ ನೀಡಿ, ಸ್ಪಂದಿಸದಿದ್ದರೆ ಕಾನೂನು ಪ್ರಕಾರ ಟೆಂಡರ್ ರದ್ದುಪಡಿಸಿ, ಬೇರೆಯವರಿಗೆ ಗುತ್ತಿಗೆ ನೀಡುವಂತೆ ಸೂಚಿಸಿದರು.
ಅಗತ್ಯ ಹಣ ಕೊಟ್ಟಿದ್ದರೂ ಆರು ತಿಂಗಳಲ್ಲಿ ಕೇವಲ 4% ಕಾಮಗಾರಿ ಮಾಡಿದ್ದೀಯಲ್ಲಾ, ಸಾರ್ವಜನಿಕರಿಗೆ ಆಗುವ ತೊಂದರೆ ಬಗ್ಗೆ ಪ್ರಜ್ಞೆ ಬೇಡ್ವಾ, ನಿನ್ನ ಕೈಲಿ ಆಗದಿದ್ದರೆ ಜಾಗ ಖಾಲಿ ಮಾಡಿ ಎಂದು ಕಂಪನಿ ಪ್ರತಿನಿಧಿಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದರು.
Key words: Easypur, flyover, CM, Siddaramaiah