HomeBreaking NewsLatest NewsPoliticsSportsCrimeCinema

ಎತ್ತಿನಹೊಳೆ: ಕಾಂಗ್ರೆಸ್ ಸರ್ಕಾರದ ಮತ್ತೊಂದು ಬಂಡಲ್ ಬೊಗಳೆ- ಆರ್.ಅಶೋಕ್ ಟೀಕೆ

06:09 PM Sep 06, 2024 IST | prashanth

ಬೆಂಗಳೂರು,ಸೆಪ್ಟಂಬರ್,6,2024 (www.justkannada.in):  ಇಂದು ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರದ ಬಳಿ ಸಿಎಂ ಸಿದ್ದರಾಮಯ್ಯ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ  ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿ ಟೀಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ಎತ್ತಿನಹೊಳೆ; ಕಾಂಗ್ರೆಸ್ ಸರ್ಕಾರದ ಮತ್ತೊಂದು ಬಂಡಲ್ ಬೊಗಳೆ ಎಂದಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ 2010ರಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ರೂಪಿಸಿದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯನ್ನ ಕಾಂಗ್ರೆಸ್ ಸರ್ಕಾರ ಇಂದು ತನ್ನದೇ ಸಾಧನೆ ಎಂದು ಪುಟಗಟ್ಟಲೆ ಜಾಹೀರಾತು ಕೊಟ್ಟು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿರುವುದು ಕಾಂಗ್ರೆಸ್ ಪಕ್ಷ ಬೌದ್ಧಿಕವಾಗಿ, ನೈತಿಕವಾಗಿ ಎಷ್ಟು ದಿವಾಳಿ ಆಗಿದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಎಂದು ಆರ್.ಅಶೋಕ್ ಕುಟುಕಿದ್ದಾರೆ.

2010ರಲ್ಲಿ ಅಂದಿನ ಜಲ ಸಂಪನ್ಮೂಲ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಎತ್ತಿನಹೊಳೆ ಯೋಜನೆಯ ಪ್ರಸ್ತಾವನೆಯನ್ನು ಅಂದಿನ ಮುಖ್ಯಮಂತ್ರಿ ಯಡಿಯರಪ್ಪನವರ ಮುಂದಿಟ್ಟಾಗ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಅದಕ್ಕೆ ತಾತ್ವಿಕ ಒಪ್ಪಿಗೆ ನೀಡಿತ್ತು.  2012 ಅಂದಿನ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡರು ಒಟ್ಟು 8,000 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದರು. ಅಂದಿನ ಜನಸಂಪನ್ಮೂಲ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದಿಂದ ಮತ್ತು ಇನ್ನಿತರ ಪ್ರಾಧಿಕಾರಗಳಿಂದ ಎಲ್ಲ ರೀತಿಯ ಅನುಮತಿ ಪಡೆಯಲು ಕಾರಣರಾದರು.

ನಂತರ 2013ರಲ್ಲಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2017ರ ವೇಳೆಗೆ ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಮಾತು ಕೊಟ್ಟು, ಬಯಲು ಸೀಮೆ ಜನರಿಗೆ ಮೋಸ ಮಾಡಿದರು. ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಈ ಯೋಜನೆ ಪೂರ್ಣಗೊಳಿಸುವ ಬದ್ಧತೆ ತೋರಲೇ ಇಲ್ಲ .

ನಂತರ 2022-23ರ ಬಜೆಟ್ ನಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ 3,000 ಕೋಟಿ ರೂಪಾಯಿ ಅನುದಾನ ನೀಡಿ ಎತ್ತಿನಹೊಳೆ ಯೋಜನೆಗೆ ವೇಗ ನೀಡಿತ್ತು. 2014ರಲ್ಲಿ 8,500 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಯೋಜನೆಯ ವೆಚ್ಚ ಇದೀಗ 23,251 ಕೋಟಿ ರೂ.ಗೆ ಮುಟ್ಟಿದೆ. ಇದಕ್ಕೆ ಯಾರು ಕಾರಣ? 2013ರಿಂದ ಈಗ 2024ರವರೆಗೆ ಒಟ್ಟು ಸುಮಾರು 7-8 ವರ್ಷ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿತ್ತು, ಸುಮಾರು ಆರೂವರೆ ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳಾಗಿದ್ದರು. ಈ ಯೋಜನೆ ಇಷ್ಟು ವಿಳಂಬವಾಗಲು ಯಾರು ಕಾರಣ? ಯೋಜನಾ ವೆಚ್ಚ ಆರಂಭಿಕ ಅಂದಾಜಿಗಿಂತ ಮೂರು ಪಟ್ಟು ಹೆಚ್ಚಾಗಲು ಕಾರಣ ಯಾರು? ಎಂದು ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ಇಷ್ಟಾದರೂ ಬೆಟ್ಟ ಅಗೆದು ಇಲಿ ಹಿಡಿದರು ಎಂಬಂತೆ ಕಟ್ಟ ಕಡೆಯ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ತಲುಪುತ್ತದೆಯೋ ಇಲ್ಲವೋ ಎಂಬ ದಟ್ಟ ಅನುಮಾನ ಈ ಜಿಲ್ಲೆಗಳ ಜನರಲ್ಲಿ ಕಾಡುತ್ತಿದೆ. ಅಸಲಿಗೆ ಈ ಯೋಜನೆ ರೂಪಿಸಿದ್ದೇ ಈ ಮೂರು ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸಲು. ಈ ಉದ್ದೇಶವೇ ಸಾರ್ಥಕವಾಗದಿದ್ದರೆ ಈ ಇಡೀ ಯೋಜನೆ ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ  ಡಿಕೆ ಶಿವಕುಮಾರ್ ಅವರಿಗೆ ನಿಜವಾಗಿಯೂ ಈ ಭಾಗದ ಜನರ ಬಗ್ಗೆ ಬದ್ಧತೆ ಇದ್ದಿದ್ದರೆ ಎತ್ತಿನಹೊಳೆ ಯೋಜನೆಗೆ ಈ ಮೂರು ಜಿಲ್ಲೆಗಳಲ್ಲಿ ಒಂದು ಕಡೆ ಚಾಲನೆ ನೀಡಬೇಕಾಗಿತ್ತು.

ಕಾಂಗ್ರೆಸ್ ಸರ್ಕಾರದ ಬೋಗಸ್ ಗ್ಯಾರೆಂಟಿಗಳ ರೀತಿಯಲ್ಲಿ ಇಂದಿನ ಕಾರ್ಯಕ್ರಮವೂ ಒಂದು ಬಿಟ್ಟಿ ಪ್ರಚಾರ ಪಡೆಯುವ ನಾಟಕವೇ ಹೊರತು ಇದರಿಂದ ಜನರಿಗೆ ಯಾವುದೇ ಲಾಭವಿಲ್ಲ ಎಂದು ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

Key words: Ettinahole project, bundle of lies, Congress government, R. Ashok

Tags :
bundle of liesCongress-governmentEttinahole projectR.ashok
Next Article