ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಕಲ ಸಿದ್ಧತೆ.
ಮೈಸೂರು,ಏಪ್ರಿಲ್,25,2024 (www.justkannada.in): ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನಾಳೆ ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ನಾಳೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿ ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿರುತ್ತದೆ. ಇನ್ನು ಭಾರಿ ಕುತೂಹಲ ಕೆರಳಿಸಿರುವ ಮೈಸೂರು-ಕೊಡಗು ಕ್ಷೇತ್ರದಲ್ಲಿ ಮತದಾನಕ್ಕೆ ಸಿದ್ದತೆ ಮಾಡಕೊಳ್ಳಲಾಗಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 20,92,222, ಈ ಪೈಕಿ ಪುರುಷರು 10,26,324, ಮಹಿಳೆಯರು 10,65,714, ಇತರರು 184 ಮಂದಿ ಇದ್ದಾರೆ. ಕ್ಷೇತ್ರದಲ್ಲಿ ಒಟ್ಟು 2202 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿದ್ದು ಈ ಪೈಕಿ 435 ಸೂಕ್ಷ್ಮ ಮತಗಟ್ಟೆಗಳೆಂದು ಪೊಲೀಸ್ ಇಲಾಖೆ ಗುರುತಿಸಿದೆ. ಎಲ್ಲಾ 2202 ಮತಗಟ್ಟೆಗಳಲ್ಲೂ ಸಿಸಿ ಕ್ಯಾಮರಾ ಕಣ್ಗಾವಲು ಇರಿಸಲಾಗಿದ್ದು, ಮತದಾನ ಸುಸೂತ್ರವಾಗಿ ನಡೆಯಲು 9809 ಮತಗಟ್ಟೆ ಸಿಬ್ಬಂದಿಗಳನ್ನ ನೇಮಕ ಮಾಡಲಾಗಿದೆ.
ಮತ ಚಲಾಯಿಸುವ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಲು ವ್ಯವಸ್ಥೆ ಮಾಡಲಾಗಿದೆ. ಚುನಾವಣಾ ಕರ್ತವ್ಯಕ್ಕಾಗಿ 473 ಕೆ ಎಸ್ ಆರ್ ಟಿ ಸಿ ಬಸ್ಸುಗಳು, 33 ಜೀಪ್ ಗಳು, 79 ಮಿನಿ ಬಸ್ ಗಳನ್ನ ಬಳಕೆ ಮಾಡಲಾಗುತ್ತಿದೆ. ವಿಶೇಷ ಚೇತನರು ಸರದಿ ಸಾಲಿನಲ್ಲಿ ನಿಲ್ಲುವ ಬದಲು ನೇರವಾಗಿ ಮತಗಟ್ಟೆ ಪ್ರವೇಶಿಸಿ ಮತ ಚಲಾವಣೆಗೆ ಅವಕಾಶ ನೀಡಲಾಗಿದೆ. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ತುರ್ತು ಚಿಕಿತ್ಸೆ ನೀಡಲು ಮೆಡಿಕಲ್ ಕಿಟ್ ಸಹ ಸಿದ್ದವಾಗಿದೆ.
Key words: first phase, election, Mysore-Kodagu