For the best experience, open
https://m.justkannada.in
on your mobile browser.

ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ನಿರ್ಧಾರ- ಸಚಿವ ಹೆಚ್.ಸಿ ಮಹದೇವಪ್ಪ

04:13 PM Aug 27, 2024 IST | prashanth
ಸೆ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ನಿರ್ಧಾರ  ಸಚಿವ ಹೆಚ್ ಸಿ ಮಹದೇವಪ್ಪ

ಬೆಂಗಳೂರು,ಆಗಸ್ಟ್,27,2024 (www.justkannada.in): ಸೆಪ್ಟಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 313 ರಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಮಾನ್ಯ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

ಈ ಕುರಿತು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಸೆಪ್ಟೆಂಬರ್ 15 ನೇ ತಾರೀಖಿನಂದು ಜರುಗುತ್ತಿರುವ ಈ ಬೃಹತ್ ಕಾರ್ಯಕ್ರಮದಲ್ಲಿ ಬೀದರ್ ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿಯನ್ನು ವಹಿಸಲಿದ್ದಾರೆ ಎಂದರು.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಅರಿವಿನ ಜಾಗೃತಿ ಅತ್ಯಂತ ಅಗತ್ಯವಾಗಿದ್ದು ಈ ಹಿನ್ನಲೆಯಲ್ಲಿ ಸರ್ಕಾರವು ಬೃಹತ್ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ.

ಸೆಪ್ಟೆಂಬರ್ 15 ರ ಆ ದಿನ ಪ್ರಜಾಪ್ರಭುತ್ವದ ಭಾಗವಾಗಿರುವ ಎಲ್ಲ ಜನರೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿಂಬಿಸುವುದಕ್ಕೆ ಪೂರಕವಾಗಿ ಚಟುವಟಿಕೆಗಳನ್ನು ಮಾಡಬಹುದು ಮತ್ತು ಮಾನವ ಸರಪಳಿಯಲ್ಲಿ ಪಾಲ್ಗೊಳ್ಳಬಹುದು. ಸೆಪ್ಟೆಂಬರ್ 15 ರಂದು ಬೆಳಗ್ಗೆ 8.30 ಕ್ಕೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಸುಮಾರು 40 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Government, celebrate International Democracy Day, HC Mahadevappa

Tags :

.