For the best experience, open
https://m.justkannada.in
on your mobile browser.

ಜನತಾ ದರ್ಶನ: ಅಭೂತಪೂರ್ವ ಜನ ಸ್ಪಂದನೆ ಬಳಿಕ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದ ಸಿಎಂ ಸಿದ್ದರಾಮಯ್ಯ

06:19 PM Nov 27, 2023 IST | prashanth
ಜನತಾ ದರ್ಶನ  ಅಭೂತಪೂರ್ವ ಜನ ಸ್ಪಂದನೆ ಬಳಿಕ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,27,2023(www.justkannada.in): ಜಿಲ್ಲಾ ಮಟ್ಟದಲ್ಲೇ ಬಗೆಹರಿಯಬೇಕಾದ ಸಮಸ್ಯೆಗಳು ಬೆಂಗಳೂರಿನವರೆಗೂ ಬರಕೂಡದು. ಬಂದರೆ ನಿಮ್ಮಗಳ ವೈಫಲ್ಯ. ಇದನ್ನು ಸಹಿಸುವುದಿಲ್ಲ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ  ನೀಡಿದರು.

ಜನತಾದರ್ಶನ ಬಳೀಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು...

ಇಂದು ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.  ಎರಡು ತಿಂಗಳ ಹಿಂದೆಯೇ ನಡೆಯಬೇಕಾಗಿತ್ತು. ಎಲ್ಲ ಜಿಲ್ಲಾ ಸಚಿವರಿಗೆ ಪತ್ರ ಬರೆದಿದ್ದೆ; ಜಿಲ್ಲೆಗಳಲ್ಲಿ ಜನತಾ ಸ್ಪಂದನ ಕಾರ್ಯಕ್ರಮ ಮಾಡಿ ನನಗೆ ವರದಿ ಸಲ್ಲಿಸಬೇಕೆಂದು ತಿಳಿಸಲಾಗಿತ್ತು. ಕೆಲವು ಜಿಲ್ಲೆಗಳಿಂದ ಮಾತ್ರ ವರದಿ ಬಂದಿದೆ. ಉಳಿದ ಜಿಲ್ಲೆಗಳಿಂದ ವರದಿ ಬಂದಿಲ್ಲ. ಇದನ್ನು ಸಹಿಸಲ್ಲ.  ಜನತಾ ಸ್ಪಂದನ- ಅನೇಕ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲಿ ಪರಿಹಾರ ನೀಡಲು ಸಾಧ್ಯವಾಗುತ್ತದೆ. ಕೆಲವು ಅರ್ಜಿಗಳು ಕೂಡಲೇ ತೀರ್ಮಾನ ಮಾಡಲು ಆಗೊದಿಲ್ಲ. ಸಮಯ ಬೇಕಾಗುತ್ತದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು. ಇಲ್ಲವಾದರೆ ಬೆಳೆಯುತ್ತಲೇ ಹೋಗುತ್ತವೆ ಎಂದರು.

ಇಂದು ಬಂದ ಅರ್ಜಿಗಳಲ್ಲಿ ಬಹುತೇಕವಾಗಿ ಕಂದಾಯ, ಪೊಲೀಸ್‌ ಇಲಾಖೆ, ಗೃಹಲಕ್ಷ್ಮಿ ಯೋಜನೆ, ಬಿಬಿಎಂಪಿ, ಪಿಂಚಣಿ, ಗ್ರಾಚ್ಯುಟಿ ಇತ್ಯರ್ಥ, ವಸತಿ ಕೊಡಿ, ಉದ್ಯೋಗ ಕೊಡಿಸಿ ಎಂಬ ಮನವಿಗಳು ಬಂದಿವೆ. ವಿಶೇಷವಾಗಿ ಅಂಗವಿಕಲರು ಉದ್ಯೋಗ ಕೊಡಿಸಿ, ತ್ರಿಚಕ್ರ ವಾಹನ ಕೊಡಿಸಿ ಎಂದು ಮನವಿ ಸಲ್ಲಿಸಿದ್ದಾರೆ. 4000 ತ್ರಿಚಕ್ರ ವಾಹನ ಒದಗಿಸಲಾಗಿದೆ. ವಿಶೇಷವಾಗಿ ಜಿಲ್ಲಾಧಿಕಾರಿಗಳು ಸ್ಥಳೀಯವಾಗಿಯೇ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ. ಖಾತೆ, ಪಹಣಿ, ಪೋಡಿ ಮಾಡಲು ನನ್ನ ಬಳಿ ಬರಬೇಕಾ? ಎಂದು  ಪ್ರಶ್ನಿಸಿದರು.

ಜಿಲ್ಲಾಧಿಕಾರಿಗಳು, ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು ಕೆಲಸ ಮಾಡಿದರೆ ಜನರು ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ.  ಕಟ್ಟುನಿಟ್ಟಿನ ಸೂಚನೆಯನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇನೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಸ್ಪತ್ರೆ, ಪೊಲೀಸ್‌ ಠಾಣೆ, ಹಾಸ್ಟೆಲುಗಳು ಮತ್ತಿತರ ಸ್ಥಳಗಳಿಗೆ ಭೇಟಿ ನೀಡಬೇಕು. ಜನರ ಸಮಸ್ಯೆ ಬಗೆಹರಿಸಬೇಕು.  ವಿಳಂಬ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಕೂಡಲೇ ಜನರಿಗೆ ಸ್ಪಂದಿಸಲು ಸೂಚಿಸಿದರು. ಕಾನೂನು ರೀತ್ಯ ಮಾಡಲು ಸಾಧ್ಯವಾಗದಿದ್ದರೆ, ಹಿಂಬರಹ ನೀಡಬೇಕು.

ಇಂದು ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ಹದಿನೈದು ದಿನದೊಳಗೆ ಇವುಗಳನ್ನು ವಿಲೇವಾರಿ ಮಾಡಬೇಕು. ನಿಯಮಾವಳಿಗಳಡಿ ಅವಕಾಶವಿಲ್ಲದೆ ಇದ್ದರೆ, ಹಿಂಬರಹ ನೀಡಬೇಕು. ಕೆಳಹಂತದ ಅಧಿಕಾರಿಗಳಿಗೆ ನೀವು ಕೂಡಲೇ ಸ್ಪಂದಿಸಬೇಕು.

ಕನಿಷ್ಠ ಮೂರು ತಿಂಗಳಿಗೊಮ್ಮೆ ಜನತಾಸ್ಪಂದನ ಕಾರ್ಯಕ್ರಮ ಮಾಡುತ್ತೇನೆ. ಮುಂದಿನ ಬಾರಿ ಹೆಚ್ಚು ಜನ ಬಂದರೆ, ತಳಹಂತದ ಅಧಿಕಾರಿಗಳು ಕೆಲಸ ಸರಿಯಾಗಿ ಮಾಡುತ್ತಿಲ್ಲ ಎಂದು ಪರಿಗಣಿಸಲಾಗುವುದು ಹಾಗೂ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಇಂದು ಮೂರುವರೆ ಸಾವಿರ ಅರ್ಜಿ ಸ್ವೀಕರಿಸಲಾಗಿದೆ. ಇವುಗಳನ್ನು ಪರಿಶೀಲಿಸಿ, ಕಾನೂನು ರೀತ್ಯ ಪರಿಹಾರ ನೀಡಬೇಕು. ಸಾಧ್ಯವಾಗದಿದ್ದರೆ ಹಿಂಬರಹ ನೀಡಬೇಕು. ತಳಹಂತದ ಅಧಿಕಾರಿಗಳು ಅರ್ಜಿಯನ್ನು ಇತ್ಯರ್ಥಪಡಿಸಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

Key words: Janata Darshan- CM Siddaramaiah - warning - after – unprecedented- public response

Tags :

.