ಕನ್ನಡಿಗರ ಉದ್ಯೋಗಕ್ಕಾಗಿ ಬೀದಿಗಿಳಿದ ಕರವೇ: ರಾಜ್ಯಾದ್ಯಂತ ಹೋರಾಟ
ಬೆಂಗಳೂರು, ಜುಲೈ,1,2024 (www.justkannada.in): ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹಿಸಿ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿದೆ.
ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರವೇಯಿಂದ ಪ್ರತಿಭಟನೆ ನಡೆಯುತ್ತಿದ್ದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಇಂದು ಏಕಕಾಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಣಕಹಳೆ ಮೊಳಗಿಸಿದೆ.
ಫ್ರೀಡಂಪಾರ್ಕ್ ನಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು ನಟಿ ಪೂಜಾಗಾಂಧಿ ಸಾಥ್ ನೀಡಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಉದ್ಯೋಗವಕಾಶ ಸಿಗಬೇಕು. ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಡ್ಡಾಯ ಮಾಡಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಬೆಳಗಾವಿಯಲ್ಲಿ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ರ್ಯಾಲಿ ನಡೆಸಿ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಗಿದೆ.
Key words: Kannadiga, employment, protest, karave