ನ.1ರಂದು ಕರ್ನಾಟಕ ಸಂಭ್ರಮ-50: ಕೆಂಪು ಹಳದಿ ಬಣ್ಣದ ರಂಗೋಲಿ ಬಿಡಿಸಿ, ಗಾಳಿಪಟ ಹಾರಿಸಿ-ಸಚಿವ ಶಿವರಾಜ್ ತಂಗಡಗಿ ಮನವಿ
ಬೆಂಗಳೂರು,ಅಕ್ಟೋಬರ್,28,2023(www.justkannada.in): ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ. ಹೀಗಾಗಿ ನವೆಂಬರ್ 1ರಂದು ಕರ್ನಾಟಕ ಸಂಭ್ರಮ-50 ಅಂಗವಾಗಿ ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ" ಎಂಬ ಘೋಷ ವಾಕ್ಯವನ್ನು ಬರೆಯುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸಚಿವ ಶಿವರಾಜ ತಂಗಡಗಿ, ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಸ್ವರೂಪ ಸಿದ್ಧಪಡಿಸಲಾಗಿದೆ. ಅದರಂತೆ, ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ ವತಿಯಿಂದ ಕೆಲ ಅಂಶಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು ಹಾಗೂ ಸಂಬಂಧಪಟ್ಟ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದಿದ್ದಾರೆ.
ನವೆಂಬರ್ 1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ" ಎಂಬ ಘೋಷ ವಾಕ್ಯವನ್ನು ಬರೆಯಬೇಕು.
ನವೆಂಬರ್ 1 ರ ಬೆಳಿಗ್ಗೆ 9.00 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ ಮನವಿ ಮಾಡಿದ್ದಾರೆ.
ನವೆಂಬರ್ 1 ರ ಸಂಜೆ 5.00 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಬೇಕು. ಅಂದು ಸಂಜೆ 7.00 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಛೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು ಈ ಎಲ್ಲಾ ಅಂಶಗಳ ಬಗ್ಗೆ ಜಿಲ್ಲಾಡಳಿತ ಸೂಕ್ತ ಸುತ್ತೋಲೆಗಳನ್ನು ಹೊರಡಿಸಿ, ಜಿಲ್ಲೆಯ ಎಲ್ಲಾ ನಾಗರಿಕರ ಹಾಗೂ ಸಂಘ ಸಂಸ್ಥೆಗಳ ಸಹಯೋಗ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವ ಶಿವರಾಜ ತಂಗಡಗಿ ಸೂಚಿಸಿದ್ದಾರೆ.
Key words: Karnataka Celebration-50 - November 1-Draw - rangoli-Minister- Shivaraj Tantagagi