ಕೇರಳ ಭೂ ಕುಸಿತ ದುರಂತ: ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜುಲೈ 31,2024 (www.justkannada.in): ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿದು ಮೃತಪಟ್ಟವರ ಸಂಖ್ಯೆ 200 ಗಡಿ ತಲುಪಿದ್ದು, 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಈ ಮಧ್ಯೆ ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ.
ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ. ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ.
Key words: Kerala landslide, CM Siddaramaiah, compensation