ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಆ.19 ರಂದು ಬೃಹತ್ ಪ್ರತಿಭಟನೆಗೆ KPCC ಕರೆ
ಬೆಂಗಳೂರು, ಆಗಸ್ಟ್,17,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಆಗಸ್ಟ್ 19ರಂದು ಜಿಲ್ಲಾ ಡಿಸಿಸಿ ಕೇಂದ್ರಗಳ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಈ ಕುರಿತು ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಪ್ರಕಟಣೆ ಮೂಲಕ ಆದೇಶಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಕರ್ನಾಟಕದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ಪಕ್ಷಪಾತಿ ನಡೆಯನ್ನು ಖಂಡಿಸಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಜಿಲ್ಲಾ ಕೇಂದ್ರಗಳಲ್ಲಿ ದಿನಾಂಕ 19-08-2024 ಬೆಳಿಗ್ಗೆ 11-00 ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕು ಹಾಗೂ ರಾಜ್ಯಪಾಲರ ಅಸಂವಿಧಾನಿಕ ನಡೆಯನ್ನು ಖಂಡಿಸಿ ರಾಷ್ಟ್ರಪತಿಗಳಿಗೆ ನೇರವಾಗಿ ಈ ಮೈಲ್ ಮೂಲಕ (presidentofindia@rb.nic.in) ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಮೂಲಕ ಜ್ಞಾಪನಾ ಪತ್ರವನ್ನು (Memorandum) ನೀಡಬೇಕು. ಈ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಕನಿಷ್ಠ ಅರ್ಧ ಕಿಲೋಮೀಟರ್ ಪಾದಯಾತ್ರೆ ಮೂಲಕ ಹೋಗಿ ಪ್ರತಿಭಟನೆ ಆರಂಭಿಸಬೇಕು. ಈ ಪ್ರತಿಭಟನೆಯ ವರದಿಯನ್ನು ಫೋಟೋ ಹಾಗೂ ವಿಡೀಯೋ ಸಮೇತ ಕೆಪಿಸಿಸಿಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಎಲ್ಲಾ ಸಂಬಂಧಪಟ್ಟ ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, 2024ರ ಲೋಕಸಭೆ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, 2023ರ ವಿಧಾನಸಭೆ ಅಭ್ಯರ್ಥಿಗಳು, ಕೆಪಿಸಿಸಿ ಸದಸ್ಯರು, ಡಿಸಿಸಿ/ಬಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕ/ಸೆಲ್/ವಿಭಾಗಗಳ ಅಧ್ಯಕ್ಷರು/ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು, ವಾರ್ಡ್, ಪಂಚಾಯಿತಿ ಹಾಗೂ ಬೂತ್ ಮಟ್ಟದ ಕಾರ್ಯಕರ್ತರುಗಳು ಹಾಗೂ ಇತರ ಎಲ್ಲ ಸ್ಥಳೀಯ ಮುಖಂಡರುಗಳು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
Key words: KPCC, protest, August 19, prosecution, CM