ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ-ಗೃಹಸಚಿವ ಡಾ.ಜಿ.ಪರಮೇಶ್ವರ್.
ತುಮಕೂರು,ನವೆಂಬರ್,27,2023(www.justkannada.in): ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದರು.
ಸಾಲಬಾಧೆ ತಾಳಲಾರದೆ ನಗರದಲ್ಲಿ ನಿನ್ನೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಗರೀಬ್‌ಸಾಬ್ ಎಂಬುವವರು ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿದ್ದರು. ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ ಮೊಹ್ಮದ್ ಶಬೀರ್, ಮೊಹಮದ್ ಮುನೀರ್ ಮೃತರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಎರಡು ಪುಟಗಳ ಡೆತ್ನೋಟ್ನಲ್ಲಿ ಉಲ್ಲೇಖಿಸಲಾಗಿತ್ತು.
ಈ ಸಂಬಂಧ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗರೀಬ್ ಸಾಬ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಐದು ಜನರನ್ನು ವಶಕ್ಕೆ ಪಡೆಯಲಾಗಿದೆ. ಅಮಾಯಕರಿಗೆ ಸಾಲ ಕೊಟ್ಟು ಬಡ್ಡಿ ಪಡೆಯುವುದು ಹೆಚ್ಚಾಗಿದೆ. ಮೀಟರ್ ಬಡ್ಡಿ ಮಾಡುವವರ, ದಂಧೆ ನಡೆಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಇಂತಹ ಘಟನೆ ಮರುಕಳಿಸಬಾರದು. ಇದನ್ನು ತಡೆಯುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪರಮೇಶ್ವರ್ ತಿಳಿಸಿದರು.
Key words: Legal -action -against – meter- interest- business -Minister -Dr. G. Parameshwar