ಹುಬ್ಬಳ್ಳಿ ರೈತರನ್ನು ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ- ಸಿಎಂ ಸಿದ್ದರಾಮಯ್ಯ ಕಿಡಿ.
ಬೆಂಗಳೂರು,ಫೆಬ್ರವರಿ,12,2024(www.justkannada.in): ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎನ್ನುವುದು ಸ್ಪಷ್ಟ ಎಂದು ಆರೋಪಿಸಿರುವ ಸಿಎಂ ಸಿದ್ದರಾಮಯ್ಯ, ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯು ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು.
ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
Key words: Madhya Pradesh –government- - arrest –Hubli- farmers – condemnable-CM Siddaramaiah