ಕಲುಷಿತ ನೀರಿನಿಂದ ಜನರು ಅಸ್ವಸ್ಥ: ಕೆ.ಸಾಲುಂಡಿ ಗ್ರಾಮಕ್ಕೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭೇಟಿ.
ಮೈಸೂರು,ಮೇ,22,2024 (www.justkannada.in): ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಒಬ್ಬರು ಮೃತಪಟ್ಟು, ಅನೇಕ ಮಂದಿ ಅಸ್ವಸ್ಥಗೊಂಡಿರುವ ಹಿನ್ನೆಲೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಬುಧವಾರ ಗ್ರಾಮಕ್ಕೆ ಭೇಟಿ ನೀಡಿದರು.
ಗ್ರಾಮದ ಸರ್ಕಾರಿ ಶಾಲೆಯಲ್ಲಿ ತೆರೆದಿರುವ ತಾತ್ಕಾಲಿಕ ವೈದ್ಯಕೀಯ ಕ್ಯಾಂಪ್ ಗೆ ಭೇಟಿ ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ ಅವರು, ಜಿಲ್ಲಾ ಆರೋಗ್ಯಾಧಿಕಾರಿ ಅವರಿಂದ ಘಟನೆ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರು ಕಲುಷಿತಗೊಂಡ ಹಿನ್ನೆಲೆ ಗ್ರಾಮಸ್ಥರಲ್ಲಿ ವಾಂತಿ, ಬೇದಿ ಕಾಣಿಸಿಕೊಂಡು ಅನೇಕರು ಅಸ್ವಸ್ಥರಾಗಿದ್ದಾರೆ. ಇವರಿಗೆ ಕಾಲರಾದ ಲಕ್ಷಣಗಳು ಕಾಣಿಸಿಕೊಂಡಿದೆ ಎಂದರು.
ಶುದ್ಧ ಕುಡಿಯುವ ನೀರು ಪೂರೈಕೆಗಾಗಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ವರದಿ ನೀಡುವಂತೆ ಸೂಚಿಸಿದ್ದಾರೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ವೇಳೆ ಕಲುಷಿತ ನೀರು ಸೇವಿಸಿ ಮೃತಪಟ್ಟ ಯುವಕ ಕನಕರಾಜು ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ, ಕುಟುಂಬಕ್ಕೆ ಸರ್ಕಾರದ ವತಿಯಿಂದ ಎರಡು ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ.ಹರೀಶ್ ಗೌಡ, ಮೂಡಾ ಅಧ್ಯಕ್ಷರಾದ ಕೆ.ಮರೀಗೌಡ ಹಾಗೂ ಸ್ಥಳೀಯ ಮುಖಂಡರು ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
Key words: polluted, water, salundi, Dr. HC Mahadevappa