ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಖಂಡಿಸಿ ಪ್ರತಿಭಟನೆ: ಒಟ್ಟು 141 ಸಂಸದರು ಅಮಾನತು.
ನವದೆಹಲಿ,ಡಿಸೆಂಬರ್,19,2023(www.justkannada.in): ಲೋಕಸಭೆಯಲ್ಲಿ ಭದ್ರತಾ ವೈಫಲ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಈವರೆಗೆ ವಿಪಕ್ಷಗಳ ಒಟ್ಟು 141 ಸಂಸದರನ್ನ ಅಮಾನತು ಮಾಡಲಾಗಿದೆ.
ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಉತ್ತರಕ್ಕೆ ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಇಂದು 49 ಸದಸ್ಯರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಅಮಾನತು ಮಾಡಿದ್ದಾರೆ. ಈ ಮೂಲಕ ಚಳಿಗಾಲದ ಅಧಿವೇಶನದಲ್ಲಿ ಒಟ್ಟು ಅಮಾನತು ಆದ ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ.
ಸೋಮವಾರ ಕಲಾಪ ಮುಗಿಯುವವರೆಗೆ ರಾಜ್ಯಸಭೆ ಮತ್ತು ಲೋಕಸಭೆಯಿಂದ ಒಟ್ಟು 92 ಸಂಸದರನ್ನು ಅಮಾನತು ಮಾಡಲಾಗಿತ್ತು. ಲೋಕಸಭೆಯಲ್ಲಿನ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಅವರ ಉತ್ತರಕ್ಕೆ ಬೇಡಿಕೆ ಇಟ್ಟು ವಿರೋಧ ಪಕ್ಷಗಳ ಒಕ್ಕೂಟ 'ಇಂಡಿಯಾ'ದ ಸದಸ್ಯರು ಕಳೆದ ಕೆಲ ದಿನಗಳಿಂದ ಪ್ರತಿಭಟನೆ ನಡೆಸಿದ್ದಾರೆ.
ಇಂದು ಸಹ ಕಾಂಗ್ರೆಸ್ ನೇತೃತ್ವದಲ್ಲಿ ಸಂಸತ್ ಭವನದ ಆವರಣದಲ್ಲಿ ವಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದರು.
Key words: Protest -against –security- failure- Lok Sabha -141 MPs -suspended.