ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ನಮ್ಮ ಸರ್ಕಾರ ಸರ್ವ ಸನ್ನದ್ಧ-ಸಿಎಂ ಸಿದ್ದರಾಮಯ್ಯ ನುಡಿ
ಬೆಂಗಳೂರು, ಜನವರಿ 26,2024(www.justkannada.in): ಇತ್ತೀಚೆಗೆ ಹೆಡೆ ಎತ್ತಿರುವ ಕೋಮುವಾದ, ನಮ್ಮ ಜಾತ್ಯತೀತ ಸಮಾಜಕ್ಕೆ ಅಪಾಯವನ್ನುಂಟು ಮಾಡುವ ಆತಂಕವನ್ನು ಅನುಭವಿಸುತ್ತಿದ್ದೇವೆ. ಹೀಗಾಗಿ ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ನಮ್ಮ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಬೆಂಗಳೂರಿನಲ್ಲಿ 75ನೇ ಗಣರಾಜ್ಯೋತ್ಸವ ಅಂಗವಾಗಿ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕನ್ನಡಿಗರು ನೀಡಿರುವ ಜನಮತದಲ್ಲಿ ಸಂವಿಧಾನದ ಆಶಯವಾದ ಜಾತ್ಯತೀತ ಸಮಾಜದ ರಕ್ಷಣೆಯ ಸಂದೇಶವೂ ಇದೆ ಎನ್ನುವುದನ್ನು ನಮ್ಮ ಸರ್ಕಾರ ಅರ್ಥಮಾಡಿಕೊಂಡಿದೆ. ಕೋಮುವಾದ ಆಂತಕ ಸೃಷ್ಟಿಸುತ್ತಿದೆ. ನಮ್ಮ ನಡೆ ಅಭಿವೃದ್ಧಿಯ ಕಡೆಗೆ ಸಾಗುತ್ತಿದ್ದರೂ ನಮ್ಮ ಕನಸಿನ ಭಾರತದ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ ಎನ್ನುವುದನ್ನು ವಿಷಾದದಿಂದಲೇ ಒಪ್ಪಬೇಕಾಗಿದೆ. ಅಭಿವೃದ್ಧಿಯ ದಾರಿಯಲ್ಲಿ ಹೊಸ ಸವಾಲುಗಳು ಎದುರಾಗಿವೆ ಎಂದರು.
ಸಮಾಜವನ್ನು ಧರ್ಮಗಳ ಆಧಾರದಲ್ಲಿ ವಿಭಜಿಸುವ ಹುನ್ನಾರಕ್ಕೆ ಜನತೆ ಬಲಿಯಾಗಬಾರದು. ಚುನಾಯಿತ ಸರ್ಕಾರ ಇಲ್ಲವೇ ಜನಪ್ರತಿನಿಧಿಗಳು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಜಾತಿ-ಧರ್ಮಗಳಂತಹ ಭಾವನಾತ್ಮಕ ವಿಷಯಗಳನ್ನು ದುರ್ಬಳಕೆ ಮಾಡುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ದವಾದುದು ಮತ್ತು ಸಂವಿಧಾನಕ್ಕೆ ಬಗೆವ ದ್ರೋಹವಾಗಿದೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.
ಈ ವಾರದಲ್ಲಿ ಬೆಳೆ ಪರಿಹಾರದ ಮೊದಲ ಕಂತು ಬಿಡುಗಡೆ.
ಇದೇ ವೇಳೆ ಈ ವಾರದಲ್ಲಿ ಬೆಳೆ ಪರಿಹಾರದ ಮೊದಲ ಕಂತು ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಈಗಾಗಲೇ ಬೆಳೆ ಪರಿಹಾರ 2,000 ರೂ. ಘೋಷಣೆ. ಈವರೆಗೆ 550 ಕೋಟಿ ರೈತರ ಖಾತೆಗೆ ಜಮೆ ಆಗಿದೆ. ಈ ವಾರದಲ್ಲಿ ಮೊದಲ ಕಂತಿನ ಪರಿಹಾರ ತಲುಪಲಿದೆ ಎಂದು ಗಣರಾಜ್ಯೋತ್ಸವದ ಸಂದೇಶದಲ್ಲಿ ಸಿಎಂ ಘೋಷಣೆ ಮಾಡಿದರು.
Key words: Republic day- government – communal- forces - CM Siddaramaiah