ವೆಸ್ಟ್ ನೈಲ್ ಜ್ವರದ ಭೀತಿ: ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್.
ಮೈಸೂರು,ಮೇ,15,2024 (www.justkannada.in): ನೆರೆಯ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ, ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.
ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರದ ಬೀತಿ ಎದುರಾಗಿದೆ. ವೆಸ್ಟ್ ನೈಲ್ ಜ್ವರದ ಲಕ್ಷಣಗಳು ಕೇರಳದಿಂದ ಕಾಣಿಸಿಕೊಂಡಿರುವ ಪರಿಣಾಮ ಕರ್ನಾಟಕ ಗಡಿಯಲ್ಲಿ ಹೈ ಅಲಾರ್ಟ್ ಘೋಷಣೆ ಮಾಡಲಾಗಿದೆ. ಕೇರಳ ರಾಜ್ಯಕ್ಕೆ ಹೊಂದಿಕೊಂಡಂತೆ ಇರುವ ಕರ್ನಾಟಕ ರಾಜ್ಯದ ಹೆಚ್.ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ ಸೇರಿದಂತೆ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಗಡಿ ಭಾಗದಲ್ಲಿ ರೋಗದ ಲಕ್ಷಣಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಗಡಿ ಭಾಗದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಜನಜಾಗೃತಿಗೆ ಮುಂದಾಗಿದ್ದಾರೆ.
ಜ್ವರ, ಮೈ ಕೈ ನೋವಿನ ಜೊತೆಗೆ ದೇಹದ ಮೇಲೆ ದದ್ದುಗಳು ಕಾಣಿಸಿಕೊಳ್ಳುವುದು ವೆಸ್ಟ್ ನೈಲ್ ಜ್ವರದ ಲಕ್ಷಣಗಳಾಗಿವೆ. ಈ ರೀತಿಯ ಲಕ್ಷಣಗಳು ಕಂಡು ಬಂದರೆ ಕೂಡಲೇ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ವೆಸ್ಟ್ ನೈಲ್ ಜ್ವರ ಮಾರಣಾಂತಿಕವಲ್ಲ. ಹಾಗಾಗಿ ಜನರು ಆತಂಕಕ್ಕೆ ಒಳಗಾಗಬಾರದು. ಸಾಮಾನ್ಯ ಜ್ವರಕ್ಕೆ ನೀಡುವಂತೆ ವೆಸ್ಟ್ ನೈಲ್ ಜ್ವರಕ್ಕೂ ಚಿಕಿತ್ಸೆ ನೀಡಲಾಗುತ್ತದೆ ಎಂದು ಮೈಸೂರು ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಿ.ಸಿ ಕುಮಾರಸ್ವಾಮಿ ಹೇಳಿದ್ದಾರೆ.
Key words: West Nile, fever, alert, Mysore district