ನಾಳೆ ವಿಶ್ವವಿಖ್ಯಾತ ಜಂಬೂಸವಾರಿ: ಮೈಸೂರು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಮೈಸೂರು, ಅಕ್ಟೋಬರ್ 23, 2023 (www.justkannada.in): ನಾಡಹಬ್ಬ ದಸರೆಯ ಪ್ರಮುಖ ಆಕರ್ಷಣೆ ಜಂಬೂಸವಾರಿ (ವಿಜಯದಶಮಿ ಮೆರವಣಿಗೆ) ನಾಳೆ (ಅ.24) ನಡೆಯಲಿದ್ದು, ಜಿಲ್ಲಾಡಳಿತದಿಂದ ಅಂತಿಮ ಹಂತದ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ.
750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗುವ ಅಧಿದೇವತೆ ಚಾಮುಂಡೇಶ್ವರಿ ಮೂರ್ತಿಗೆ ನಮಿಸಲು, ಗಜಪಡೆಯನ್ನು ನೋಡಲು ಜನರು–ಪ್ರವಾಸಿಗರು ಕಾತರರಾಗಿದ್ದಾರೆ.
ಅಂಬಾರಿ ಹೊರಲಿರುವ ‘ಅಭಿಮನ್ಯು’ ನೇತೃತ್ವದಲ್ಲಿ 14 ಆನೆಗಳು ಆಕರ್ಷಕ ವಿದ್ಯುತ್ ದೀಪಾಲಂಕಾರದ ನಡುವೆ ಸಾಗಲಿರುವುದು ವಿಶೇಷ. ಅರಮನೆಯ ಬಲರಾಮ ದ್ವಾರದಲ್ಲಿ ಮಂಗಳವಾರ ಮಧ್ಯಾಹ್ನ1.46ರಿಂದ 2.08ರೊಳಗೆ ನಂದಿಧ್ವಜ ಪೂಜೆ ನೆರವೇರಲಿದೆ.
ಸಂಜೆ 4.40ರಿಂದ 5ರವರೆಗೆ ಅಂಬಾವಿಲಾಸ ಅರಮನೆಯ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.